ಸಂಸದರ ಅಮಾನತು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
1 min readಸಂಸದರ ಅಮಾನತು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ 2024ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸ
ಸ್ರಕಾರದ ವಿರುದ್ಧ ಮಾತನಾಡಿದ ಕಾರಣಕ್ಕೆ ಅಮಾನತು ಮಾಡುವ ಮೂಲಕ ಸರ್ವಾಧಿಕಾರಿ ಧೋರಣೆಯನ್ನು ಕೇಂದ್ರ ಬಿಜೆಪಿ ಸರ್ಕಾರ ಅನುಸರಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ರಕ್ಷಾ ರಾಮಯ್ಯ ಆರೋಪಿಸಿದರು.
ಸಂಸತ್ ನಿಂದ ವಿಪಕ್ಷ ಸಂಸದರನ್ನು ಅಮಾನತು ಮಾಡಿರುವುದನ್ನು ಖಂಡಿಸಿ, ಸಂಸದ ಪ್ರತಾಪ್ ಸಿಂಹ ಅವರನ್ನು ಅಮಾನತು ಮಾಡಲು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ನಿಂದ ಚಿಕ್ಕಬಳ್ಳಾಪುರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಪ್ರತಾಪ್ ಸಿಂಹ ಅವರು ನೀಡಿದ ಪಾಸ್ ನಿಂದಲೇ ಸಂಸತ್ ನಲ್ಲಿ ಸ್ಮೋಕ್ ಸಿಡಿಸಲಾಗಿದ್ದು, ಕೂಡಲೇ ಅವರನ್ನು ಸಂಸತ್ ಸ್ಥಾನದಿಂದ ಅಮಾನತು ಮಾಡಿ, ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
ಉಪರಾಷ್ಟ್ರಪತಿ ಧನಕರ್ ಅವರನ್ನು ಅವಮಾನಿಸಿರುವ ಘಟನೆಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸದೆ ಜಾರಿಕೊಂಡ ರಕ್ಷಾ, ಇಂತಹ ಪ್ರಕರಣ ನಡೆದಿರುವ ಬಗ್ಗೆ ತಮ್ಮ ಗಮನಕ್ಕೆ ಬಂದಿಲ್ಲ ಎಂದು ಹೇಳುವ ಮೂಲಕ ನುಣಿಚಿಕೊಂಡರು.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಐಎನ್ ಡಿಎ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ದೊರೆಯಲಿದ್ದು, ಕೇಂದ್ರದಲ್ಲಿ ಅಧಿಕಾರ ಹಿಡಿಯುವ ವಿಶ್ವಾಸ ವ್ಯಕ್ತಪಡಿಸಿದ ಅವರು, ಕೇಂದ್ರ ಸರ್ಕಾರ ಜನ ವಿರೋಧಿ ಬಿಲ್ ಗಳನ್ನು ಪಾಸ್ ಮಾಡಲು ವಿರೋಧ ಪಕ್ಷದ ಸಂಸದರನ್ನು ವಿನಾಕಾರಣ ಅಮಾನತು ಮಾಡಿ ಹೊರ ಕಳುಹಿಸಿದೆ. ಆದರೆ ಮುಂದೆ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಈ ಎಲ್ಲ ಕಪ್ಪು ಬಿಲ್ ಗಳನ್ನು ರದ್ದು ಮಾಡಲಾಗುವುದು ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಎನ್. ಕೇಶವರೆಡ್ಡಿ ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದ್ದು, ಸಂಸದ ಪ್ರತಾಪ್ ಸಿಂಹ ಅವರನ್ನು ಕೂಡಲೇ ಅಮಾನತು ಮಾಡಿ, ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
ಶುಕ್ರವಾರ ಬೆಳಗ್ಗೆ ಚುಕ್ಕಬಳ್ಳಾಪುರದ ಒಕ್ಕಲಿಗರ ಕಲ್ಯಾಣ ಮಂಟಪದ ಬಳಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಬಿಬಿ ರಸ್ತೆ ಮೂಲಕ ಶಿಡ್ಲಘಟ್ಟ ವೃತ್ತದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು.
ನಂತರ ಕೆಲ ಕಾಲ ಶಿಡ್ಲಘಟ್ಟ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಭಾಗವಿಸಿದ್ದರು.
https://youtube.com/@ctvnewschikkaballapura?si=C-CJWuVfM-65JQMa