ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ಬೀದಿಗಿಳಿದು ಪ್ರತಿಭಟಿಸಿದ ಬಿಜೆಪಿ
1 min readಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ಕಾಂಗ್ರೆಸ್ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವ ಆರೋಪ ಚಿಕ್ಕಬಳ್ಳಾಪುರದಲ್ಲಿ ಬೀದಿಗಿಳಿದು ಪ್ರತಿಭಟಿಸಿದ ಬಿಜೆಪಿ
31 ವರ್ಷದ ಹಿಂದಿನ ಪ್ರಕರಣಗಳನ್ನು ಹೊರ ತೆಗೆದು, ವಿನಾಕಾರಣ ಹಿಂದೂ ಕಾರ್ಯಕರ್ತರನ್ನಿ ಟಾರ್ಗೆಟ್ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಟಿಪ್ಪು ಆಡಳಿತಕ್ಕೆ ನಾಂದಿ ಹಾಡಿದ್ದು, ಮುಂದಿನ ದಿನಗಳಲ್ಲಿ ಜನರೇ ಇದಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ. ಮುನಿರಾಜು ಎಚ್ಚರಿಕೆ ನೀಡಿದರು.
ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ವೃತ್ತದಲ್ಲಿ ಬುಧವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, 1992ರಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಆಗ್ರಹಿಸಿ ನಡೆದಿದ್ದಾ ಹೋರಾಟಗಳಲ್ಲಿ ಹಲವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಅಂದಿನಿಂದ ಹಲವು ಸರ್ಕಾರಗಳು ರಾಜ್ಯದಲ್ಲಿ ಆಡಳಿತಕ್ಕೆ ಬಂದಿವೆ. ಅದರಲ್ಲೂ ಕಾಂಗ್ರೆಸ್ ಸರ್ಕಾರಗಳೇ ನಾಲ್ಕು ಬಾರಿ ಅಧಿಕಾರಕ್ಕೆ ಬಂದಿವೆ. ಸಾಲದೆಂಬಂತೆ ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಈ ಹಿಂದೆ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದರು. ಆಗಲೂ ನೆನಪಾಗದ ಪ್ರಕರಣಗಳು ಈಗ ಯಾಕೆ ನೆನಪಾಗಿವೆ ಎಂದು ಪ್ರಶ್ನಿಸಿದರು.
ಪಿಎಫ್ ಐನಂತಹ ಭಯೋತ್ಪಾದಕ ಸಂಘಟನೆಗಳ ವಿರುದ್ಧ ದಾಖಲಾಗಿದ್ದ ಪ್ರಕರಣಗಳು, ಹುಬ್ಬಳ್ಳಿಯ ಪೊಲೀಸ್ ಠಾಣೆಯ ಮೇಲೇ ದಾಳಿ ನಡೆಸಿ ಭಯೋತ್ಪದನೆ ಸೃಷ್ಟಿಸಿದ್ದ ಕ್ರಿಮಿನಲ್ ಗಳ ವಿರುದ್ಧ ದಾಖಲಿಸಿದ್ದ ಪ್ರಕರಣಗಳನ್ನು ವಾಪಸ್ ಪಡೆಯಲು ಹೇಳುವ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ರಾಮನಿಗಾಗಿ ಶಾಂತಿಯುತ ಹೋರಾಟ ಮಾಡಿದವರನ್ನು ಬಂಧಿಸುತ್ತಿರುವುದು ಸರ್ಕಾರದ ಹಿಂದೂ ವಿರೋಧಿ ನೀತಿಗೆ ನಿದರ್ಶನ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಅಲ್ಪಸಂಖ್ಯಾತರ ಓಲೈಕೆ ಮತ್ತು ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದು, ಮೂರು ದಶಕಗಳ ಹಿಂದಿನ ಪ್ರಕರಣಗಳನ್ನು ತೆಗೆದು ಹಿಂದೂಗಳ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾಗಿದೆ ಎಂದು ಆರೋಪಿಸಿದರು.
ಒಂದು ಕುಟುಂಬಕ್ಕೆ ಸೀಮಿತವಾಗಿ, ಆಡಳಿತ ನಡೆಸಿದಾಗಲೆಲ್ಲ ಭ್ರಷ್ಟಾಚಾರದಿಂದಲೇ ಕುಖ್ಯಾತಿಗೆ ಬಂದಿರುವ ಕಾಂಗ್ರೆಸ್, ಆರಂಭದಿಂದಲೇ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಕಳೆದ 9 ವರ್ಷಗಳಿಂದ ಸಣ್ಣ ಭ್ರಷ್ಟಾಚಾರವೂ ನಡೆಯದಂತೆ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಆರ್ಟಿಕಲ್ 370 ರದ್ದು, ರಾಮಮಂದಿರ ನಿರ್ಮಾಣ ಸೇರಿದಂತೆ ಅನೇಕ ಜನಪರ ಕಾರ್ಯಗಳನ್ನು ಪೂರೈಸಿದ್ದು, ಕಪ್ಪುಚುಕ್ಕಿ ಇಲ್ಲದ ಆಡಳಿತ ನಡೆಸುತ್ತಿದ್ದಾರೆ. ರಾಮಮಂದಿರಕ್ಕೆ ದೇಣಿಗೆ ನೀಡಲು ನಿರಾಕರಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈಗ ರಾಮ ಭಕ್ತರ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾಗಿರುವುದು ಖಂಡನೀಯ ಎಂದರು.
ಕೂಡಲೇ ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿ ಕೈಬಿಟ್ಟು, ಸಂವಿಧಾನದ ಆಶಯದಂತೆ ನಡೆದುಕೊಳ್ಳಬೇಕಾಗಿದೆ. ಇಲ್ಲವಾದರೆ ಮುಂದಿನ ದಿನಗಳಲ್ಲಿ ಜನರೇ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಲಿದ್ದು, ಕಾಂಗ್ರೆಸ್ ಕಣ್ಮರೆಯಾಗಲಿದೆ ಎಂದು ಭವಿಷ್ಯ ನುಡಿದರು.
ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರೇಗೌಡ ಮಾತನಾಡಿ, ಜನವರಿ 20 ರಂದು ಈ ದೇಶದ ಸಂಕೇತ ಹಾಗೂ ಹಿಂದೂಗಳ ಸ್ವಾಭಿಮಾನದ ಸಂಕೇತವಾದ ಶ್ರೀರಾಮನ ಮಂದಿರ ಅಯೋಧ್ಯೆಯಲ್ಲಿ ಉದ್ಘಾಟನೆಯಾಗಲಿದೆ. ಇದು ಭಾರತದ ಪ್ರತಿಯೊಬ್ಬರೂ ಹೆಮ್ಮೆಯ ವಿಚಾರವಾಗಿದೆ. ಆದರೆ ಸದಾ ರಾಜಕೀಯವನ್ನೇ ಬಯಸುವ ಮತ್ತು ಅಲ್ಪಸಂಖ್ಯಾತರ ಓಲೈಕೆ ಮಾಡುವ ಕಾಂಗ್ರೆಸ್ ಗೆ ಮಾತ್ರ ಇದು ನುಂಗಲಾರದ ತುತ್ತಾಗಿ ಪರಿಣಮಿಸಿದೆ ಎಂಬುದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ದ್ವೇಷ ಸಾಧಿಸುತ್ತಿರುವುದೇ ನಿದರ್ಶನವಾಗಿದೆ ಎಂದರು.
ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ವೃತ್ತದಲ್ಲಿ ಮಾನವ ಸರಪಳಿ ನಿರ್ಮುಸಿ, ಕೆಲ ಕಾಲ ರಸ್ತೆ ತಡೆ ನಡೆಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರ, ಸಿಎಂ, ಡಿಸಿಎಂ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಲಿ ಅಲ್ಲಿಯೂ ಕೆಲ ಕಾಲ ಪ್ರತಿಭಟನೆ ನಡೆಸಿದರು. ನಂತರ ಸರ್ಕಾರದ ಕ್ರಮ ಖಂಡಿಸಿ ಮತ್ತು ಹಿಂದೂ ಕಾರ್ಯಕರ್ತರ ಬಂಧನ ವಿರೋಧಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.