ಪೌರ ಕಾರ್ಮಿಕರು ವೈಯಕ್ತಿಕ ಸ್ವಚ್ಛತೆಗೂ ಗಮನ ಹರಿಸಿ
1 min readಪೌರ ಕಾರ್ಮಿಕರು ವೈಯಕ್ತಿಕ ಸ್ವಚ್ಛತೆಗೂ ಗಮನ ಹರಿಸಿ
ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಸಲಹೆ
ಪೌರ ಕಾರ್ಮಿಕರು ಸಾರ್ವಜನಿಕರ ಆರೋಗ್ಯ ರಕ್ಷಣೆ ಮಾಡುವ ವೈದ್ಯರಿದ್ದಂತೆ. ನಿತ್ಯ ಪಟ್ಟಣದ ಸ್ವಚ್ಛತೆಗಾಗಿ ಶ್ರಮಿಸುತ್ತಿದ್ದಾರೆ. ಅವರನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹೇಳಿದರು.
ಬಾಗೇಪಲ್ಲಿ ಪಟ್ಟಣದ ಪುರಸಭೆ ಆವರಣದಲ್ಲಿ ಇಂದು ಆಯೋಜಿಸಿದ್ದ ಪೌರ ಕಾರ್ಮಿಕ ದಿನಾಚರಣೆ ಉದ್ಘಾಟನೆ ಮಾಡಿ ಮಾತನಾಡಿದ ಶಾಸಕ ಸುಬ್ಬಾರೆಡ್ಡಿ, ರೋಗ ರುಜಿನಿಗಳು ಹರಡದಂತೆ ಪೌರ ಕಾರ್ಮಿಕರು ತಮ್ಮ ಆರೋಗ್ಯವನ್ನು ಲೆಕ್ಕಿಸದೆ ಪೌರರ ಆರೋಗ್ಯವನ್ನು ಕಾಪಾಡಲು ವೈದ್ಯಾದಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪೌರ ಕಾರ್ಮಿಕರು ಆರೋಗ್ಯವಾಗಿದ್ದರೆ ಮಾತ್ರ ಪಟ್ಟಣದ ಪೌರರು ಆರೋಗ್ಯದಿಂದಿರಲು ಸಾಧ್ಯ. ಆ ನಿಟ್ಟಿನಲ್ಲಿ ಪೌರಕಾರ್ಮಿಕರು ಕೇಲಸದ ವೇಳೆ ಸರಕಾರ ನೀಡಿದ ಹ್ಯಾಂಡ್ ಗ್ಲೌಜ್, ಶೂಗಳನ್ನು ಕಡ್ಡಾಯವಾಗಿ ಬಳಸುವಂತೆ ಸೂಚಿಸಿ, ಪೌರ ಕಾರ್ಮಿಕರು ತಮ್ಮ ಕಾಯಕದ ಬಗ್ಗೆ ನಿರಾಸಕ್ತಿ ತೋರದೆ, ಮನಪೂರ್ವಕವಾಗಿ, ಶ್ರದ್ಧೆಯಿಂದ ಕಾಯಕ ಮಾಡಬೇಕು ಎಂದು ಹೇಳಿದರು.
ಪೌರಕಾರ್ಮಿಕರ ಮಕ್ಕಳು ಪೌರ ಕಾರ್ಮಿಕರಾಗಿ ದುಡಿಯಬೇಕೆಂದಿಲ್ಲ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಅವರು ಮುಂದೆ ಉತ್ತಮ ನಾಗರಿಕರಾಗಿ ಸಮಾಜದಲ್ಲಿ ಉನ್ನತ ಹುದ್ದೇ ಹೊಂದುವ0ತೆ ನೋಡಿಕೊಳ್ಳಲು ಪೌರ ಕಾರ್ಮಿಕರಿಗೆ ಶಾಸಕ ಕಿವಿ ಮಾತು ಹೇಳಿದರು.
ಉಪಾಧ್ಯಕ್ಷ ಸುಜಾತ ನರಸಿಂಹ ನಾಯ್ಡು ಮಾತನಾಡಿ, ಗಾಳಿ, ಮಳೆ, ಬಿಸಿಲು, ಚಳಿ ಎನ್ನದೆ, ದಿನನಿತ್ಯ ನಸುಕಿನ ಜಾವದಿಂದ ಸ್ವಚ್ಛತಾ ಕಾರ್ಯ ಕೈಗೊಳ್ಳುವ ಪೌರ ಕಾರ್ಮಿಕರು ನೈಜ ಕಾಯಕಯೋಗಿಗಳು, ಸ್ವಚ್ಛತಾ ರೂವಾರಿಗಳು. ಕೊರೊನಾದಂತ ಸಂದಿಗ್ಧ ಸ್ಥಿತಿಯಲ್ಲಿಯೂ ತಮ್ಮ ಜೀವದ ಹಂಗು ತೊರೆದು ಬಿಡುವಿಲ್ಲದ ನೈರ್ಮಲೀಕರಣ ಕಾರ್ಯ ಮಾಡಿದ್ದು ಶ್ಲಾಘನೀಯ ಎಂದು ಹೇಳಿದರು.
ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಪಟ್ಟಣದ ಪುರಸಭೆ 62 ಪೌರ ಕಾರ್ಮಿಕರು ಹಾಗೂ ನೀರು ಸರಬರಾಜುದಾರರಿಗೆ ಪುರುಷರಿಗೆ ಪ್ಯಾಂಟ್ ಶರ್ಟ್ ಹಾಗೂ ಮಹಿಳೆಯರಿಗೆ ಸೀರೆ ಮತ್ತು ಬ್ಲೌಸ್ ತಮ್ಮ ವೈಯಕ್ತಿಕವಾಗಿ ಉಡುಗೊರೆಯಾಗಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಎನ್.ಶ್ರೀನಿವಾಸ್, ಪುರಸಭೆ ಸದಸ್ಯರಾದ ಶ್ರೀನಿವಾಸ್ ರೆಡ್ಡಿ, ಎ.ನಂಜು0ಡಪ್ಪ, ರೇಷ್ಮಾ ಭಾನು, ಗಡ್ಡಂ ರಮೇಶ್, ಶ್ರೀನಾಥ್, ಪುರಸಭೆ ಅಧಿಕಾರಿ ಕೃಷ್ಣಪ್ಪ, ಅತಾವುಲ್ಲೆ ಇದ್ದರು.