ಕನ್ನಡದಲ್ಲೂ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹ
1 min readಕೇಂದ್ರ ಸರ್ಕಾರದ ಹುದ್ದೆಗಳಿಗೆ ನಡೆಸುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಹಿಂದಿ ಅಥವಾ ಇಂಗ್ಲಿಷ್ ಮಾತ್ರವಲ್ಲದೆ ಕನ್ನಡದಲ್ಲೂ ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಒತ್ತಾಯಿಸಿದ್ದಾರೆ.
ಕಂಠೀರವ ಕ್ರೀಡಾಂಗಣದಲ್ಲಿ ನಡೆದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಕೇಂದ್ರ ಸರ್ಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾಷಾ ಮಾಧ್ಯಮವನ್ನು ಮರುಪರಿಶೀಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವುದಾಗಿ ತಿಳಿಸಿದರು.
ಕೇಂದ್ರ ಸರ್ಕಾರವು ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ನಡೆಸುತ್ತಿದೆ ಎಂದು ಶಿವಾಜಿ ನಗರ ಶಾಸಕ ರಿಜ್ವಾನ್ ಅರ್ಷದ್ ಅವರು ಸರಿಯಾಗಿಯೇ ಹೇಳಿದ್ದಾರೆ. ಅದನ್ನು ನಾವು ವಿರೋಧಿಸಬೇಕಾಗಿದೆ ಎಂದು ಸಿಎಂ ಹೇಳಿದರು.
ಕೇವಲ ಹಿಂದಿ ಮತ್ತು ಇಂಗ್ಲಿಷ್ ನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಬಾರದು. ನಮ್ಮ ಮಕ್ಕಳು ಅವರಿಗೆ ತಿಳಿದಿರುವ ಭಾಷೆಯಲ್ಲಿ ಪರೀಕ್ಷೆಗಳನ್ನು ಬರೆಯುತ್ತಾರೆ. ನಾನು ಪ್ರಧಾನಿಯವರಿಗೆ ಪತ್ರ ಬರೆದು ಭಾಷಾ ಮಾಧ್ಯಮವನ್ನು ಮರುಪರಿಶೀಲಿಸುವಂತೆ ವಿನಂತಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.
ಸರ್ಕಾರಿ ಶಾಲೆಗಳಲ್ಲಿ ಮಾತ್ರ ಕನ್ನಡ ಬೋಧನಾ ಮಾಧ್ಯಮವಾಗಿದೆಯೇ ಹೊರತು ಖಾಸಗಿ ಶಾಲೆಗಳಲ್ಲ ಎಂದು ಹೇಳಿದ ಮುಖ್ಯಮಂತ್ರಿ, ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಓದುವವರು ಮಾತ್ರ ಪ್ರತಿಭಾವಂತರು ಮತ್ತು ಸಭ್ಯರು ಎಂಬ ತಪ್ಪು ಕಲ್ಪನೆ ಜನರಲ್ಲಿದೆ ಎಂದು ವಿಷಾದಿಸಿದರು.