ಕರ್ನಾಟಕದ ಹಲವೆಡೆ ಇನ್ನೂ ನಾಲ್ಕು ದಿನ ಗುಡುಗು ಸಿಡಿಲು ಸಹಿತ ಮಳೆ: ಕರಾವಳಿಗೆ ಭಾರೀ ಮಳೆ ಸಾಧ್ಯತೆ
1 min readಕಳೆದ ಎರಡು ದಿನದಿಂದ ಕರಾವಳಿ ಜಿಲ್ಲೆಗಳು ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಕಡೆ ಉತ್ತಮ ಮಳೆಯಾಗಿದೆ. ಈಶಾನ್ಯ ಮಾನ್ಸೂನ್‌ನಿಂದ ಉತ್ತಮ ಮಳೆ ನಿರೀಕ್ಷಿಸಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನಲ್ಲಿ ಹಗುರ ಮಳೆ ಹೊರತುಪಡಿಸಿದರೆ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ , ಉಡುಪಿ , ಉತ್ತರ ಕನ್ನಡದಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಲಿದ್ದು, ಎಚ್ಚರಿಕೆಯಿಂದ ಇರಬೇಕಿದೆ.
ರಾಜ್ಯದ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಇನ್ನೂ ಕೆಲವು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾನುವಾರ ರಾತ್ರಿಯಿಂದ ಸೋಮವಾರ ಬೆಳಗ್ಗೆವರೆಗೆ ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿಒಣಹವೆ ಮುಂದುವರಿದಿದೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಕೊಡಗು ಜಿಲ್ಲೆಯ ನಾಪೋಕ್ಲು, ಶಿವಮೊಗ್ಗ ಜಿಲ್ಲೆಯ ತಾಳಗುಪ್ಪದಲ್ಲಿ ತಲಾ 5 ಸೆಂ.ಮೀ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ತಲಾ 4 ಸೆಂ.ಮೀ, ಉಡುಪಿ ಜಿಲ್ಲೆಯ ಶಿರಾಲಿ, ಸಿದ್ದಾಪುರ, ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಅ.30ರಂದು ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 36.5 ಡಿ.ಸೆ ದಾಖಲಾಗಿದ್ದರೆ, ವಿಜಯಪುರದಲ್ಲಿ16.2 ಡಿ.ಸೆ. ಉಷ್ಣಾಂಶ ದಾಖಲಾಗಿದೆ.
ಇಂದು ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.